
ಮಂಡ್ಯ : ಮೇಲ್ಮನವಿದಾರರಿಗೆ ಮಾಹಿತಿ ನೀಡುವಂತೆ ಕರ್ನಾಟಕ ಮಾಹಿತಿ ಆಯೋಗ ಆದೇಶ ನೀಡಿದ್ದರೂ ಸಹ ತಾಲೂಕಿನ ಹಳುವಾಡಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಮಾಹಿತಿ ನೀಡದೆ ಆಯೋಗದ ಆದೇಶಕ್ಕೂ ಕವಡೆ ಕಾಸಿನ ಕಿಮ್ಮತ್ತು ನೀಡುತ್ತಿಲ್ಲ ಎಂದು ಸಾಮಾಜಿಕ ಕಾರ್ಯಕರ್ತ ಎಂ. ಚಾಮರಾಜು ದೂರಿದ್ದಾರೆ.
ಹಳುವಾಡಿ ಗ್ರಾಮ ಪಂಚಾಯಿತಿಯಲ್ಲಿ 15 ನೇ ಹಣಕಾಸು ಯೋಜನೆಯಲ್ಲಿ ಖರ್ಚಾಗಿರುವ ಹಣಕ್ಕೆ ಸಂಬಂಧಿಸಿದಂತೆ 2023 ರ ಫೆ. 25 ರಂದು ಅರ್ಜಿ ಸಲ್ಲಿಸಲಾಗಿತ್ತು. ಸಾರ್ವಜನಿಕ ಮಾಹಿತಿ ಅಧಿಕಾರಿ ಮಾಹಿತಿ ನೀಡದ ಕಾರಣ 2023 ರ ಏಪ್ರಿಲ್ 11ರಂದು ಪ್ರಥಮ ಮೇಲ್ಮನವಿಯನ್ನು ಪ್ರಾಧಿಕಾರಕ್ಕೆ ಸಲ್ಲಿಸಿದ್ದರೂ ಸಹ ಮಾಹಿತಿ ಹಕ್ಕು ನಿಯಮದಡಿ ವಿಚಾರಣೆ ನಡೆಸಿ ಪ್ರಥಮ ಮೇಲ್ಮನವಿ ಅಧಿಕಾರಿಯು ಸಹ ಮಾಹಿತಿ ಕೊಡಿಸಲು ವಿಫಲರಾದರು. ನಂತರ ಕರ್ನಾಟಕ ಮಾಹಿತಿ ಆಯೋಗಕ್ಕೆ 2023 ರ ಜೂನ್ 21ರಂದು ಮಾಹಿತಿ ಕೊಡಿಸುವಂತೆ ಮೇಲ್ಮನವಿಯನ್ನು ಸಲ್ಲಿಸಲಾಗಿತ್ತು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ವಿಚಾರಣೆ ನಡೆಸಿದ ಕರ್ನಾಟಕ ಮಾಹಿತಿ ಆಯೋಗದ ಆಯುಕ್ತ ರಾಜಶೇಖರ್ ಎಸ್ ಅವರು 2025 ರ ಡಿ. 10 ರಂದು ಮೇಲ್ಮನವಿದಾರರಿಗೆ ಮಾಹಿತಿ ನೀಡುವಂತೆ ಆದೇಶ ಮಾಡಿದ್ದರು. ಆದರೂ ಸಹ ಹಳುವಾಡಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಆಯೋಗ ಆದೇಶ ಮಾಡಿ ಎರಡು ತಿಂಗಳು ಕಳೆದರೂ ಸಹ ಮಾಹಿತಿ ನೀಡದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗ್ರಾಮ ಪಂಚಾಯಿತಿ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನ ಖಂಡಿಸಿ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗೆ ದೂರು ನೀಡಿ, ಮಾಹಿತಿ ನೀಡದೆ ನಿರ್ಲಕ್ಷ್ಯ ವಹಿಸಿರುವ ಹಳುವಾಡಿ ಗ್ರಾಮ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ದೂರು ನೀಡಲಾಗುವುದು ಎಂದು ತಿಳಿಸಿದ್ದಾರೆ.

Leave a Reply