Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ಧೂಮಪಾನ ಹಾಗೂ ತಂಬಾಕಿನ ಇತರೆ ತಂಬಾಕು ಉತ್ಪನ್ನಗಳ ಸೇವನೆ ಮಾಡುವ ನೌಕರರ ವಿರುದ್ಧ ಕ್ರಮ

ಧೂಮಪಾನ ಹಾಗೂ ತಂಬಾಕಿನ ಇತರೆ ಉತ್ಪನ್ನಗಳ ಸೇವನೆಯು ಆರೋಗ್ಯಕ್ಕೆ ಮಾರಕವಾಗಿದ್ದು ಸಾರ್ವಜನಿಕ ಪ್ರದೇಶಗಳಲ್ಲಿ ಇಂತಹ ಉತ್ಪನ್ನಗಳ ಸೇವನೆಯನ್ನು THE CIGARETTES AND OTHER TOBACCO PRODUCTS (PROHIBITION OF ADVERTISEMENT AND REGULATION OF TRADE AND COMMERCE, PRODUCTION, SUPPLY AND DISTRIBUTION) ACT, 2003 (ಕೇಂದ್ರ ಅಧಿನಿಯಮ 34/2003)ರಲ್ಲಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಕರ್ನಾಟಕ ರಾಜ್ಯ ನಾಗರಿಕ ಸೇವಾ(ನಡತೆ) ನಿಯಮಗಳು, 2021ರ ನಿಯಮ-31ರಲ್ಲಿ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಮಾದಕ ಪಾನೀಯ ಅಥವಾ ಮಾದಕ ವಸ್ತುವನ್ನು ಸೇವಿಸುವುದನ್ನು ಕೂಡ ನಿಷೇಧಿಸಲಾಗಿದೆ.

 

ಶಾಸನತ್ಮಾಕ ಎಚ್ಚರಿಕೆಗಳ ಹೊರತಾಗಿಯೂ ಸರ್ಕಾರಿ ಕಛೇರಿಗಳಲ್ಲಿ ಹಾಗೂ ಕಛೇರಿಯ ಆವರಣದಲ್ಲಿ ತಂಬಾಕು ಉತ್ಪನ್ನಗಳ ಸೇವನೆ ಆಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಈ ಹಿನ್ನೆಲೆಯಲ್ಲಿ ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಪರೋಕ್ಷ ಧೂಮಪಾನದಿಂದ ಸಾರ್ವಜನಿಕರನ್ನು ಹಾಗೂ ಸರ್ಕಾರಿ ಸಿಬ್ಬಂದಿಗಳನ್ನು ರಕ್ಷಿಸುವ ಉದ್ದೇಶದಿಂದ ಯಾವುದೇ ಸರ್ಕಾರಿ ನೌಕರನು ಸರ್ಕಾರಿ ಕಛೇರಿಗಳಲ್ಲಿ ಹಾಗೂ ಕಛೇರಿ ಆವರಣದಲ್ಲಿ ಧೂಮಪಾನ ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳ ಸೇವನೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಸಂಬಂಧ ಎಚ್ಚರಿಕೆಯ ಫಲಕವನ್ನು ಕಛೇರಿಯ ಸೂಕ್ತ ಸ್ಥಳಗಳಲ್ಲಿ ಪ್ರದರ್ಶಿಸತಕ್ಕದ್ದು.

ಈ ಸೂಚನೆಗಳನ್ನು ಉಲ್ಲಂಘಿಸಿ ಯಾವುದೇ ಸರ್ಕಾರಿ ನೌಕರ ಕಛೇರಿಯಲ್ಲಿ ಅಥವಾ ಕಛೇರಿಯ ಆವರಣದಲ್ಲಿ ಧೂಮಪಾನ ಮಾಡುವುದು ಮತ್ತು ಯಾವುದೇ ತಂಬಾಕು ಉತ್ಪನ್ನಗಳನ್ನು (ಗುಟ್ಕಾ, ಪಾನ್ ಮಸಾಲ, ಹೊಗೆಸೊಪ್ಪು ಇತ್ಯಾದಿ) ಸೇವಿಸುವುದು ಕಂಡು ಬಂದಲ್ಲಿ ಅಂತಹ ನೌಕರರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಾಗರತ್ನ ವಿ ಪಾಟೀಲ್ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!