
ಮಂಡ್ಯ ತಾಲೂಕಿನ ಶ್ರೀನಿವಾಸಪುರ ಗ್ರಾಮದ ರಸ್ತೆ ಅಭಿವೃದ್ಧಿಗಾಗಿ ಒತ್ತಾಯಿಸಿ ಗ್ರಾಮಸ್ಥರು ಮತ್ತು ಸ್ಥಳೀಯ ನಿವಾಸಿಗಳು ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು-ಅಧಿಕಾರಿಗಳ ವಿರುದ್ದ ಪ್ರತಿಭಟನೆ ನಡೆಸಿದರು.
ಉಮ್ಮಡಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಶ್ರೀನಿವಾಸಪುರ ಗ್ರಾಮದ ಮುಖ್ಯರಸ್ತೆಯ ಅಭಿವೃದ್ಧಿ ಮಾಡದೆ ಹತ್ತು ವರ್ಷಗಳಿಂದ ಮಂಡಿಉದ್ದ ಗುಂಡಿ ಬಿದ್ದ ರಸ್ತೆಗಳು ಸಾಕಷ್ಟು ಜನರಿಗೆ ಪ್ರಾಣಪಾಯ ತಂದಿವೆ, ವಾಹನ ಸವಾರರಿಗೆ ಕಿರಿಕಿರಿ ಆಗುತ್ತಿದೆ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಪಾದಚಾರಿಗಳಿಗೆ ತೊಂದರೆಯಾಗುತ್ತಿದೆ ಎಂದು ಕಿಡಿಕಾರಿದರು.
ಸಾಕಷ್ಟು ಬಾರಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕರಿಗೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಹಾಗೂ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ ಗಮನ ಸೆಳೆದಿದ್ದರು ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.
ಡಿ. ೨೦, ೨೧, ೨೨ರಂದು ಶ್ರೀನಿವಾಸಪುರ ಗ್ರಾಮ ವ್ಯಾಪ್ತಿಯ ಅಂಚಿನಲ್ಲಿಯೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಗೊಂಡಿದೆ ಕೋಟ್ಯಾಂತರ ರೂ.ಗಳನ್ನು ಖರ್ಚು ಮಾಡುತ್ತಿದ್ದಾರೆ ಆದರೆ ಸ್ಥಳೀಯವಾಗಿ ಗ್ರಾಮದ ರಸ್ತೆ ಅಭಿವೃದ್ಧಿ ಆಗದಿರುವುದು ನಾಚಿಕೆಗೇಡಿನ ಸಂಗತಿ ಎಂದರು.
ಸಮ್ಮೇಳನಕ್ಕೆ ದೇಶ ವಿದೇಶ ಹೊರ ಜಿಲ್ಲೆಗಳಿಂದ ಲಕ್ಷಾಂತರ ಜನ ಮತ್ತು ಕನ್ನಡ ಅಭಿಮಾನಿಗಳು, ಸಾಹಿತಿಗಳು ಬರುವ ಹಿನ್ನೆಲೆಯಲ್ಲಿ ಸಾಕಷ್ಟು ಜನರು ಈ ರಸ್ತೆಯಲ್ಲಿ ಸಂಚರಿಸಬೇಕಿದೆ ತಕ್ಷಣವೇ ರಸ್ತೆ ಅಭಿವೃದ್ಧಿಪಡಿಸಿ ಎಂದು ಒತ್ತಾಯಿಸಿದರು.
ಮಂಡ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಶ್ರೀನಿವಾಸಪುರ ಗ್ರಾಮದ ರಸ್ತೆಗಳು ಸಂಪೂರ್ಣವಾಗಿ ಹದಗಿಟ್ಟಿವೆ, ಹತ್ತು ವರ್ಷದಿಂದ ಅಭಿವೃದ್ಧಿ ಕಾಣದೆ ಪಾದಾಚಾರಿಗಳಿಗೆ ಮತ್ತು ವಾಹನ ಸವಾರರಿಗೆ ತೊಂದರೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಶ್ರೀನಿವಾಸಪುರ ಗ್ರಾಮ ಪಂಚಾಯಿತಿ ಸದಸ್ಯ ಆನಂದ, ಬೇಲೂರು ಗ್ರಾಮ ಪಂಚಾಯಿತಿ ಸದಸ್ಯ ನಾಗರಾಜು, ನಿವೃತ್ತ ಉಪನ್ಯಾಸಕ ಶಿವಣ್ಣಗೌಡ ಮುಖಂಡರಾದ ಡಿಸಿ ರವಿ , ಇಂದ್ರಕುಮಾರ್, ನಾಗರಾಜ್, ಉದಯ್, ಚಿಕ್ಕರಸ, ಮಹೇಶ್, ಮಾದೇಶ್, ನಾಗಮುತ್ತು, ವೆಂಕಟೇಶ್ ಮತ್ತಿತರರು ಹಾಜರಿದ್ದರು.

Leave a Reply