Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ಮಾ.10, 11 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ : ಬಿ.ಸಿ. ಶಿವಾನಂದಮೂರ್ತಿ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸರ್ಕಾರಿ ನೌಕರರ ಸಂಘದ ವತಿಯಿಂದ ಮಾಚ್೯ 10 ಮತ್ತು 11 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾ ಕೂಟವನ್ನು ಆಯೋಜಿಸಲಾಗಿದೆ  ಎಂದು ಅಪರ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ ಹೇಳಿದರು .

ಇಂದು (ಮಾ.3) ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ 2024-25 ನೇ ಸಾಲಿನಲ್ಲಿ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಸಂಘಟಿಸುವ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸರ್ಕಾರಿ ನೌಕರರು ತಮ್ಮ ಕೆಲಸದ ಜೊತೆಗೆ ವ್ಯಾಯಮ ಹಾಗೂ ಕ್ರೀಡಾಕೂಟಗಳಲ್ಲಿ ಭಾಗವಹಿಸಿದರೆ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಿ ಕೆಲಸ ನಿರ್ವಹಿಸಬಹುದು.ಮಾ‌10 ಮತ್ತು 11 ರಂದು ಆಯೋಜಿಸಿರುವ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಏರ್ಪಡಿಸಲು ಅಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ತಿಳಿಸಿದರು.

ಮಾರ್ಚ್ 10 ರಂದು ಬೆಳಿಗ್ಗೆ 8 ಗಂಟೆಗೆ ಕ್ರೀಡಾಕೂಟವನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ಉದ್ಘಾಟಿಸಲಾಗುವುದು‌  ಕ್ರೀಡಾಕೂಟದಲ್ಲಿ ಭಾಗವಹಿಸುವ ನೌಕರರಿಗೆ ಹಾಜರಾತಿ ಪತ್ರವನ್ನು ನೀಡಲಾಗುವುದು.ಸರ್ಕಾರಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ತಿಳಿಸಿದರು.

ವಿವಿಧ ಕ್ರೀಡಾ ಸ್ಪರ್ಧೆಗಳು ಸರ್ ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ, ಕ್ರಿಕೆಟ್ ಪಂದ್ಯಾವಳಿಗಳು ಪಿ.ಇ.ಎಸ್ ಕಾಲೇಜು ಕ್ರೀಡಾಂಗಣದಲ್ಲಿ  ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

ದೂರದ ತಾಲ್ಲೂಕಾದ ಕೆ.ಆರ್. ಪೇಟೆಯಿಂದ ಬರುವ ನೌಕರಿಗೆ  ವಸತಿ ವ್ಯವಸ್ಥೆ ಕಲ್ಪಿಸಲಾಗುವುದು, ಕಾರ್ಯಕ್ರಮ ಯಶಸ್ವಿಯಾಗಿ ನಡೆಸಲು ಪೊಲೀಸ್ ಇಲಾಖೆ ವತಿಯಿಂದ ಭದ್ರತಾ ವ್ಯವಸ್ಥೆ, ಆರೋಗ್ಯ ಇಲಾಖೆ ವತಿಯಿಂದ ಪ್ರಥಮ ಚಿಕಿತ್ಸೆ, ಆಂಬ್ಯುಲೆನ್ಸ್ ಸೇವೆ ಒದಗಿಸಿ ಎಂದರು.

ವಿವಿಧ ಇಲಾಖೆಗಳಿಗೆ ವೇದಿಕೆ, ಧ್ವನಿ ವರ್ಧಕ ನಿರ್ವಹಣೆ, ಕುಡಿಯುವ ನೀರಿನ  ನಿರ್ವಹಣೆ, ಊಟ, ಸ್ವಚ್ಛತೆ ಮತ್ತು ನೈರ್ಮಲ್ಯಕ್ಕೆ ಮುಂಜಾಗೃತಾ ಕ್ರಮ ಹಾಗೂ ಇನ್ನಿತರ ಜವಾಬ್ದಾರಿಗಳನ್ನು ಹಂಚಲಾಯಿತು.

ಸಭೆಯಲ್ಲಿ ನಗರಸಭೆ ಪೌರಾಯುಕ್ತೆ ಪಂಪಾಶ್ರೀ,  ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಓಂ ಪ್ರಕಾಶ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ. ನಾಗೇಶ್, ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!