
ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗುವ ವೈರಮುಡಿ ಉತ್ಸವದಲ್ಲಿ ಯಾವುದೇ ಲೋಪವಾದಂತೆ ಎಚ್ಚರಿಕೆ ವಹಿಸಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಅವರು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವೈರಮುಡಿ ಉತ್ಸವದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಏಪ್ರಿಲ್ 2 ರಿಂದ 14 ರವರೆಗೆ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿದೆ. ಏಪ್ರಿಲ್ 7 ರಂದು ನಡೆಯಲಿರುವ ವೈರಮುಡಿ ಉತ್ಸವದಲ್ಲಿ ಲಕ್ಷಾಂತರ ಭಕ್ತಾಧಿಗಳು ಭಾಗವಹಿಸಲಿದ್ದಾರೆ ಎಂದರು.
ಬೇಸಿಗೆ ಬಿಸಿಲಿನ ತಾಪ ಹೆಚ್ಚಿದ್ದು, ಭಕ್ತಾಧಿಗಳಿಗೆ ಮುಖ್ಯವಾಗಿ ಕುಡಿಯುವ ನೀರು ಸೇರಿದಂತೆ ಎಲ್ಲಾ ಮೂಲಭೂತ ವ್ಯವಸ್ಥೆಗಳಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳು ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕು ಎಂದರು.
ಕುಡಿಯುವ ನೀರು, ದಾಸೋಹ ಭವನದಲ್ಲಿ ಆಹಾರ ವಿತರಣೆ ಹಾಗೂ ಪ್ರಸಾದ ವಿತರಣೆ ಭಾಗಗಳಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳನ್ನು ನಿಯೋಜಿಸಿ ಪರೀಕ್ಷೆಗೆ ಒಳಪಡಿಸಿದ ನಂತರವೇ ವಿತರಣೆಯಾಗಬೇಕು ಎಂದರು.
ಮೇಲುಕೋಟೆಗೆ ವಿವಿಧ ಭಾಗಗಳಿಂದ ಸಂಪರ್ಕಿಸುವ ರಸ್ತೆಗಳ ದುರಸ್ತಿ ಕೆಲಸಗಳು ವೇಗವಾಗಿ ನಡೆಸಿ ಪೂರ್ಣಗೊಳಿಸಬೇಕು. ವಾಹನ ನಿಲುಗಡೆ ಸ್ಥಳಗಳಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಬೇಕು ಎಂದರು.
ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣಯ್ಯ ಅವರು ಮಾತನಾಡಿ ಕುಡಿಯುವ ನೀರಿನ ಟ್ಯಾಂಕರ್ ದೇವಸ್ಥಾನದ ಸುತ್ತಲೂ ,ಕಲ್ಯಾಣಿ, ಪಾರ್ಕಿಂಗ್ ಸ್ಥಳ ಸೇರಿದಂತೆ ಜನಸಂದಣಿ ಇರುವ ಸ್ಥಳಗಳಲ್ಲಿ ಟ್ಯಾಂಕರ್ ವ್ಯವಸ್ಥೆಯಾಗಬೇಕು ಭಕ್ತಾಧಿಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ ಎಂದರು.
ವೈರಮುಡಿ ಉತ್ಸವದಲ್ಲಿ ಭಾಗವಹಿಸುವ ಭಕ್ತಾಧಿಗಳಿಗೆ ದಾಸೋಹ ಭವನ ಪ್ರಾರಂಭವಾಗಿರುವ ಬಗ್ಗೆ ಮಾಹಿತಿ ನೀಡಲು ದೇವಸ್ಥಾನದ ಸುತ್ತಲೂ ಸೂಚನಾ ಪಲಕಗಳನ್ನು ಅಳವಡಿಸಿ, ದಾಸೋಹ ಭವನದಲ್ಲಿ ಜನಸಂದಣಿಯಾಗದಂತೆ ಬ್ಯಾರಿಕೇಡಿಂಗ್ ಆಗಬೇಕು. ದಾಸೋಹಕ್ಕೆ ಬೇಕಿರುವ ಆಹಾರ ಸಾಮಗ್ರಿಗಳ ದಾಸ್ತಾನು ಆಗಬೇಕು ಎಂದರು.
ದೇವಸ್ಥಾನ ಸುತ್ತ ಹೆಚ್ಚಿನ ಟ್ರನ್ಸ್ ಪರ್ಮರ್ ಬೇಕಿದ್ದಲ್ಲಿ ವ್ಯವಸ್ಥೆ ಮಾಡಿಕೊಳ್ಳಿ, ಅಗತ್ಯವಿರುವ ಕಡೆ ಹೆಚ್ಚಿನ ವಿದ್ಯುತ್ ದೀಪಗಳ ವ್ಯವಸ್ಥೆಯಾಗಬೇಕು. ಕಲ್ಯಾಣಿಗಳ ಸ್ವಚ್ಛತೆಯನ್ನು ಕೈಗೊಳ್ಳಿ ಎಂದರು.
ಜಿಲ್ಲಾಧಿಕಾರಿ ಡಾ: ಕುಮಾರ ಅವರು ಮಾತನಾಡಿ ಈ ಬಾರಿ 19 ಲಕ್ಷ ರೂ ವೆಚ್ಚದಲ್ಲಿ ಶಾಶ್ವತವಾಗಿ ಸಿ.ಸಿ.ಟಿ ವಿ ಅಳವಡಿಸಲಾಗುವುದು. ಇದನ್ನು ವೀಕ್ಷಿಸಲು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಯಲ್ಲಿ ಅಗತ್ಯ ವ್ಯವಸ್ಥೆ ಮಾಡಲಾಗುವುದು ಎಂದರು.
ಕಲ್ಯಾಣಿಗಳ ಬಳಿ ನುರಿತ ಈಜುಗಾರರನ್ನು ನೇಮಿಸಬೇಕು. ಕಲ್ಯಾಣಿ ಯ ಹತ್ತಿರ ವಿದ್ಯುತ್ ದೀಪಗಳು ಹಾಗೂ ಹೆಣ್ಣು ಮಕ್ಕಳಿಗೆ ಬಟ್ಟೆ ಬದಲಾಯಿಸಲು ಶೆಡ್ ಗಳ ನಿರ್ಮಾಣವಾಗಬೇಕು ಎಂದರು.
ಸಭೆಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ರವಿಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಬಿ.ಸಿ ಶಿವಾನಂದಮೂರ್ತಿ,ಪಾಂಡವಪುರ ಉಪವಿಭಾಗಾಧಿಕಾರಿ ಶ್ರೀನಿವಾಸ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply